ಅಂಕೋಲಾ: ತಾಲ್ಲೂಕಿನ ಅಡ್ಲೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲಿ ಮೃತಪಟ್ಟ ದುರ್ಘಟನೆ ಗುರುವಾರ ಸಂಜೆ ಸಂಭವಿಸಿದೆ.
ಘಟನೆಯಲ್ಲಿ ಟ್ಯಾಂಕರ್ ಚಾಲಕ ಮತ್ತು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕೇಣಿ ಮೂಲದ ಭಾಸ್ಕರ ಗಾಂವಕರ ಮೃತಪಟ್ಟಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ. ತಾಲ್ಲೂಕು ಕೇಂದ್ರದಿಂದ ಗ್ರಾಮೀಣ ಪ್ರದೇಶವಾದ ಮಕ್ಕಿಗದ್ದೆಯಿಂದ ಬಸ್ ತೆರಳುತ್ತಿತ್ತು. ಈ ವೇಳೆ ಅತಿ ವೇಗದಿಂದ ಬಂದ ಟ್ಯಾಂಕರ್ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಬಸ್ ಚಾಲಕನ ಕಾಲಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯರ ನೆರವಿನಿಂದ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ಕರೆತರಲಾಗಿದೆ. ಪೊಲೀಸರು ಕೆಎಸ್ಆರ್ಟಿಸಿ ಅಧಿಕಾರಿಗಳು ಮತ್ತು ಸಂಬಂಧಿತ ಇಲಾಖೆಯವರು ಸ್ಥಳಕ್ಕೆ ತೆರಳಿದ್ದಾರೆ.