ಕಾರವಾರ: ರಾಜ್ಯ ಸರ್ಕಾರವು ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರುಗಳಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ. ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಶನ್ ಮತ್ತು ಅಡ್ವರ್ಟೈಸಿಂಗ್ ಲಿಮಿಟೆಡ್ ಅಧ್ಯಕ್ಷ ಸತೀಶ್ ಸೈಲ್ ಸೇರಿದಂತೆ 54 ಜನರಿಗೆ ರಾಜ್ಯ ಸಚಿವ ಸ್ಥಾನಮಾನವೂ ತಕ್ಷಣದಿಂದ ಜಾರಿ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಒದಗಿಸುವಂತೆ ಆದೇಶ ಹೊರಡಿಸಲಾಗಿದೆ.
ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರಾಗಿರುವ ಕೆಲ ಶಾಸಕರು ಈ ಹಿಂದೆ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದು ಈಗ ರಾಜ್ಯ ಸಚಿವ ಸ್ಥಾನಮಾನ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಸರ್ಕಾರ ಹೊಸ ವರ್ಷದ ಕೊಡುಗೆ ನೀಡಿದಂತಾಗಿದೆ. ಉಚಿತ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಿಗೆ ಆರ್ಥಿಕ ಕೊರತೆಯ ನಡುವೆಯೂ ದೊಡ್ಡ ಪ್ರಮಾಣದಲ್ಲಿ ಸಚಿವ ಸ್ಥಾನಮಾನ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.